ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಅವರಿಗೆ ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿ

ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಕೀಲಿಮಣೆ ವಿನ್ಯಾಸ ತಜ್ಞ ಕಿನ್ನಿಕಂಬಳ ಪದ್ಮನಾಭ ರಾವ್(ಕೆ.ಪಿ.ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಅ. 10 ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಕಾಂತರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಅ. 10ರಂದು ಬಾಲವದಲ್ಲಿ ಡಾ. ಶಿವರಾಮ ಕಾರಂತರ ಜನ್ಮದಿನಾಚರಣೆ, ಪ್ರಶಸ್ತಿ ಪ್ರಧಾನ ಸಮಾರಂಭ, ನವೀಕೃತಗೊಂಡ ಡಾ. ಕಾರಂತರ ಬರೆಹದ ಮನೆ ಉದ್ಘಾಟನೆ ಹಾಗೂ ಟ. ಕಾರಂತರ ಕುರಿತ `ಬಾಲವದಲ್ಲಿ ಭಾರ್ಗವ’ ಸಂಪಾದಿತ ಕೃತಿಯ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರಿಗೆ ಪತ್ರಿಕೋದ್ಯಮದ ಜೀವಮಾನದ ಸಾಧನೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಡಾ. ಕಾರಂತರ ಜನ್ಮ ದಿನಾಚರಣೆಯನ್ನು ಮೀನುಗಾರಿಕೆ, ಬಂದರು, ಒಳನಾಡು ಮತ್ತು ಜಲಸಾರಿಗೆ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಎಸ್. ಅಂಗಾರ ಉದ್ಘಾಟಿಸಲಿದ್ದಾರೆ. ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ನವೀಕೃತ ಬರೆಹದ ಮನೆಯನ್ನು ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂಪಾದಿತ ಕೃತಿ `ಬಾಲವನದಲ್ಲಿ ಭಾರ್ಗವ’ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿವಿ ಕಾರಂತ ಅಧ್ಯಯನ ಪೀಠದ ಸದಸ್ಯರಾದ ವಿಶ್ರಾಂತ ಕನ್ನಡ ಪ್ರಾಧ್ಯಾಪಕಮ ಡಾ. ನರಸಿಂಹಮೂರ್ತಿ ಅವರು ಡಾ. ಕಾರಂತರ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮ ನಡೆಯುವ ದಿನದಂದು ಡಾ. ಶಿವರಾಮ ಕಾರಂತರ ಜ್ಞಾನಪೀಠ ಪ್ರಶಸ್ತಿಯನ್ನು ಪ್ರದರ್ಶನಕ್ಕೆ ಇಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಾ. ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ. ಸುಂದರ್ ಕೇನಾಜೆ ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.