ರಾಜ್ಯದಲ್ಲಿ ಬಿಜೆಪಿ ಸೋಲು ಗ್ಯಾರಂಟಿ : ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿಕೆ

ರಾಜ್ಯದಲ್ಲಿ ಸೋಲು ಗ್ಯಾರಂಟಿ ಎಂಬುದನ್ನು ಅರಿತಿರುವ ಬಿಜೆಪಿಯ ಹಿರಿಯ ನಾಯಕರು ಕರ್ನಾಟಕ್ಕೆ ಆಗಮಿಸಿ ಆಕ್ರೋಶಭರಿತ ಹೇಳಿಕೆಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯತಿರಿಕ್ತವಾಗಿ ಮತದಾರರನ್ನು ಬೆದರಿಸುವ ಕಾರ್ಯ ನಡೆಯುತ್ತಿದೆ. ಇಂತಹ ಬೆದರಿಕೆಗಳಿಗೆ ಈ ಬಾರಿ ಜನರಿಂದ ಸರಿಯಾದ ಉತ್ತರ ಸಿಗಲಿದೆ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಚುನಾವಣ ಪ್ರಚಾರಕ್ಕೆ ಆಗಮಿಸಿರುವ ಅಮಿತ್ ಶಾ ಅವರು, ರಾಜ್ಯವನ್ನು ಪ್ರಧಾನಿ ಮೋದಿ ಕೈಗೆ ಕೊಡಬೇಕು. ಬಿಜೆಪಿ ಅಧಿಕಾರಕ್ಕೆ ಬಾರದಿದ್ದರೆ ಗಲಭೆಯಾಗುತ್ತದೆ ಎಂಬ ಹೇಳಿಕೆಯನ್ನು ನೀಡುತ್ತಾರೆ.. ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಗಳ ಆಯ್ಕೆ ಜನರ ಹಕ್ಕು. ಆದರೆ ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲ ಎಂದವರು ಹೇಳಿದರು.
ಕಾಂಗ್ರೆಸ್ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಜನರಿಗೆ ಒದಗಿಸಲಿದೆ. ಸಿದ್ಧರಾಮಯ್ಯ ಸರಕಾರ ರಾಜ್ಯದಲ್ಲಿ ಲೋಕಾಯುಕ್ತವನ್ನು ಶಕ್ತಿಹೀನಗೊಳಿಸಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂಬ ಬಿಜೆಪಿಯ ಆರೋಪದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಪ್ರಿಯಾ, ಕಳೆದ ಮೂರುವರೆ ವರ್ಷಗಳಲ್ಲಿ ಬಿಜೆಪಿ ಈ ಬಗ್ಗೆ ಏನು ಕ್ರಮ ಕೈಗೊಂಡಿದೆ ಎಂದು ಸವಾಲೆಸೆದರು.
ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ವಕ್ತಾರ ವಿನಯ್‍ರಾಜ್ ಉಪಸ್ಥಿತರಿದ್ದರು.