ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ಅಷ್ಠಬಂಧ ಬ್ರಹ್ಮಕಲಶೋತ್ಸವ
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಗ್ರಾಮದೇವರಾದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು.
ಶ್ರೀ ಕ್ಷೇತ್ರದಲ್ಲಿ ಏಪ್ರಿಲ್ 13ರಿಂದ ಮೇ 4ರ ವರೆಗೆ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವರ ಗಂಧ ಮತ್ತು ಅನ್ನ ಪ್ರಸಾದವನ್ನು ಸ್ವೀಕರಿಸಿ ಪುನೀತರಾಗಿದ್ದಾರೆ.
ಇಂದು ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ 108 ತೆಂಗಿನಕಾಯಿಯ ಗಣಪತಿ ಹೋಮ, ಪ್ರತಿಷ್ಠಾ ಪಾಣಿ, ಮಿಥುನ ಲಗ್ನದ ಸುಮೂರ್ಹತದಲ್ಲಿ ಶ್ರೀ ದೇವರ ಪುನರ್ ಪ್ರತಿಷ್ಠೆ ಮತ್ತು ದುರ್ಗಾಂಬಿಕೆ ದೇವಿ ಪ್ರತಿಷ್ಠೆ, ಬ್ರಹ್ಮ ಕಲಶಾಭಿಷೇಕ, ಪ್ರತಿಷ್ಠಾ ಬಲಿ, ಮಹಾಪೂಜೆ, ಮಹಾ ಮಂತ್ರಾಕ್ಷತೆ, ಪ್ರಸಾದ ವಿತರಣೆ, ನಿತ್ಯ ನೈಮಿತ್ಯ ನಿರ್ಣಯ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಸದಸ್ಯರು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.