ಜೂನ್ 1ರಿಂದ ಜುಲೈ 31ರ ವರೆಗೆ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ದ.ಕ.ಜಿಲ್ಲೆಯ ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31ರವರೆಗೆ ಒಟ್ಟು 61 ದಿನ ಮೀನುಗಾರಿಕೆ ನಿಷೇಧಿಸಿ ಮೀನುಗಾರಿಕೆ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಆಳಸಮುದ್ರ ಮೀನುಗಾರಿಕೆ ಸಂಪೂರ್ಣ ನಿಷೇಧಿಸಲಾಗಿದ್ದು, 10 ಅಶ್ವಶಕ್ತಿ ಹೆಚ್ಚು ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕಾ ಚಟುವಟಿಕೆ ಕೈಗೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.

ಕರಾವಳಿಯ ಎಲ್ಲಾ ಮೀನು ಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Related Posts

Leave a Reply

Your email address will not be published.