ಗೋವಾ| ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 25ಕ್ಕೆ ಏರಿಕೆ
ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಶನಿವಾರ ತಡರಾತ್ರಿ ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿಮೀ ದೂರ ಇರುವ ಬಿರ್ಚ್ ಬೈ ರೋಮಿಯೊ ಲೇನ್‌ನಲ್ಲಿರುವ ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 25 ಮಂದಿ ಮೃತಪಟ್ಟು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಪೈಕಿ ಹೆಚ್ಚಿನವರು ನೈಟ್ ಕ್ಲಬ್ ಸಿಬ್ಬಂದಿಗಳು ಎನ್ನುವುದು ತಿಳಿದು ಬಂದಿದೆ.ಈ ಘಟನೆ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.ಗೋವಾದ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ.
‘ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ. ದುರಂತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ’ ಎಂದು ಸಿಎಂ ಸಾವಂತ್ ತಿಳಿಸಿದ್ದಾರೆ.’ಗೋವಾದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು. ಕ್ಲಬ್‌ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಜನದಟ್ಟಣೆ ಹಾಗೂ ಕಿರಿದಾದ ಪ್ರದೇಶದಿಂದಾಗಿ ಜನರಿಗೆ ಹೊರಗೆ ಹೋಗಲು ಸಾಧ್ಯವಾಗಲಿಲ್ಲ’ ಎಂದು ಅವರು ತಿಳಿಸಿದ್ದಾರೆ.’ನೈಟ್ ಕ್ಲಬ್‌ನಲ್ಲಿ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗಿಲ್ಲ. ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.


















