HomeFresh Newsವಿಧಾನಸಭೆ ಚುನಾವಣಾ ಕಣದಿಂದ ಹಿಂದೆ ಸರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

ವಿಧಾನಸಭೆ ಚುನಾವಣಾ ಕಣದಿಂದ ಹಿಂದೆ ಸರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.
ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಹಾಲಾಡಿ `ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ 5 ಅವಧಿಗೆ ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿಶ್ಚಯಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ವಿಧಾನಸಭಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ನಿಷ್ಠೆಯಿಂದ ಜವಾಬ್ದಾರಿ ನಿಭಾಯಿಸಿದ್ದೇನೆ. ಕುಂದಾಪುರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು, ಎಲ್ಲ ವರ್ಗದ ಮತದಾರರಿಗೂ ಬೇಡಿಕೆಗಳನ್ನು ಹೇಳಿಕೊಳ್ಳಲು ಅವಕಾಶ ಮಾಡಿಕೊಟ್ಟ, ನೋವು ಸಂಕಷ್ಟಗಳಿಗೆ ಸ್ಪಂದಿಸಿದ ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ಇದೆ.

ಐದೂ ಚುನಾವಣೆಗಳಲ್ಲಿ ದಾಖಲೆ ಮತಗಳ ಅಂತರದಿಂದ ಚುನಾಯಿಸಿದ ಕ್ಷೇತ್ರದ ಮತದಾರರನ್ನು ವಿಶ್ವಾಸಕ್ಕೆ ಪಡೆದು, ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿ ಪ್ರೀತಿ ವಿಶ್ವಾಸ ಗಳಿಸಿದ ಹೆಮ್ಮೆ ಇದೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗೆ ದುಡಿದಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಹಾಗೂ ಅಭಿಮಾನಿಗಳಿಗೆ ಚಿರ ಋಣಿಯಾಗಿರುತ್ತೇನೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments