ಅಸ್ಸಾಂನಲ್ಲಿ ಭಾರಿ ಮಳೆ: ಪ್ರವಾಹ-ಭೂಕುಸಿತ; ಎಂಟು ಮಂದಿ ಸಾವು

ಅಸ್ಸಾಂನಲ್ಲಿ ಕೂಡಾ ಭಾರಿ ಮಳೆಯಾಗುತ್ತಿದ್ದು, ರಸ್ತೆ ಸಾರಿಗೆ ಹಾಗೂ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ.
ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಲ್ಲಿ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 78,000ಕ್ಕೂ ಹೆಚ್ಚು ಮಂದಿ ತೊಂದರೆಗೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬ್ರಹ್ಮಪುತ್ರ ಮತ್ತು ಬರಾಕ್ ಸೇರಿದಂತೆ 10 ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ತೀವ್ರ ಪ್ರವಾಹ ಸ್ಥಿತಿ ಕುರಿತು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಎಚ್ಚರಿಕೆ ನೀಡಿದೆ.ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಪ್ರಯಾಣಿಕ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಈಶಾನ್ಯ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನ ಸಾಮಾನ್ಯರಿಗೆ ತೊಂದರೆಯಾಗಿದೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣೆ (ಎಎಸ್‌ಡಿಎಂಎ) ಬುಲೆಟಿನ್ ಪ್ರಕಾರ ಶನಿವಾರ ಸಂಜೆಯವರೆಗೆ ಭೂಕುಸಿತ ಹಾಗೂ ಪ್ರವಾಹದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ.ನೆರೆಪೀಡಿತ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ತಂಡಗಳು ಪರಿಹಾರ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದು, ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಲ್ಲಿ ‘ಅಸಹಜ ಪರಿಸ್ಥಿತಿ’ ಎದುರಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.