ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ.

ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು, ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.

1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ಮಿಂಚಿದ್ದರು.

ದ್ವಾರಕೀಶ್ ಅವರು ಹೆಚ್ಚು ಜನಪ್ರಿಯರಾದದ್ದು ವಿಷ್ಣುವರ್ಧನ್ ಅವರೊಂದಿಗೆ. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ವಿಷ್ಣುವರ್ಧನ್ ಅವರ ಅನೇಕ ಸಿನಿಮಾದಲ್ಲಿ ಅವರು ತೆರೆ ಹಂಚಿಕೊಂಡಿದ್ದರು.

1966ರಲ್ಲಿ ದ್ವಾರಕೀಶ್ ಅವರು ಮಮತೆಯ ಬಂಧನ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದರು. ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಕಾಲಿಟ್ಟರು. ‘ದ್ವಾರಕೀಶ್ ಚಿತ್ರ’ ಬ್ಯಾನರ್ ಅಡಿಯಲ್ಲಿ ಸುಮಾರು 40ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಿಸಿದ್ದರು.

1985ರಲ್ಲಿ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸುವ ಮೂಲಕ ನಿರ್ದೇಶನ ಕ್ಷೇತ್ರಕ್ಕೆ ಕಾಲಿಟ್ಟರು. ಆ ಬಳಿಕ ನಂತರ ಡಾನ್ಸ್ ರಾಜ ಡಾನ್ಸ್, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು. ಕೊನೆಯದಾಗಿ ಅವರು ಚೌಕ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಕಲಾವಿದರು, ಗಣ್ಯರು, ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

Related Posts

Leave a Reply

Your email address will not be published.