ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ: ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ: ನಳಿನ್
ಕಳೆದ ಎರಡು ಅವಧಿಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯವನ್ನು ವಿಸ್ತಾರ ಮಾಡಿ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಅತ್ಯುತ್ತಮ ಸಂಘಟಕರಾಗಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ಮಾಡಿರುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಹುರುಪು ಮೂಡಿಸಿದೆ. ಅವರ ಜತೆ ಕೆಲಸ ಮಾಡಿ ಪಕ್ಷವನ್ನು ಸಂಘಟನೆ ಮಾಡುತ್ತೇನೆ ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಮಂಗಳೂರಿನಲ್ಲಿ ಅವರು ಮಾತನಾಡಿ, ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್‍ನ ಆಡಳಿತ ವೈಫಲ್ಯ ಎದ್ದು ಕಾಣುತ್ತಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ವಿಚಾರಗಳ ವಿರುದ್ಧದ ಹೋರಾಟವನ್ನು ಕೈಗೆತ್ತಿಕೊಂಡು, ಮತ್ತೆ ಪಕ್ಷವನ್ನು ಸಂಘಟಿಸುವ ಶಕ್ತಿ ವಿಜಯೇಂದ್ರ ಅವರಲ್ಲಿದೆ. ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಎಲ್ಲ ಪ್ರಯತ್ನಗಳು ನಡೆಯಲಿವೆ ಎಂದರು.