ರಾಜಕೀಯ ಬಿಟ್ಟು ಸಮುದಾಯದ ಗೆಲುವಿಗೆ ಆದ್ಯತೆ : ಸತ್ಯಜಿತ್ ಸುರತ್ಕಲ್
ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.
ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್‌ನಲ್ಲಿ ವಿವಿಧ ಸಮಾಜದ ಬಾಂಧವರು ಇರುವುದರಿಂದ ಅದು ಹಾಗೇ ಮುಂದುವರಿಯಲಿದ್ದು, ಚುನಾವಣೆಯ ನನ್ನ ಕಾರ್ಯಕ್ಕೂ ಆ ತಂಡಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ಎಂದರು.
ರಾಜ್ಯದಲ್ಲಿ ನಾರಾಯಣಗುರು ಸಮಾಜ ಎಂದು ಹೇಳುವ ಬಿಲ್ಲವ, ಈಡಿಗ, ನಾಮಧಾರಿ ಎಂಬ 26 ಪಂಗಡಗಳ ಸಮಾಜ ಅನೇಕ ವರ್ಷಗಳ ನಂತರ ಸಮಾಜಕ್ಕೆ ಮೂರು ಕ್ಷೇತ್ರಗಳಲ್ಲಿ ಅವಕಾಶ ದೊರಕಿದೆ. ದ.ಕ., ಉಡುಪಿ, ಚಿಕ್ಕಮಗಳೂರು, ಕಾರವಾರ, ಶಿವಮೊಗ್ಗದಲ್ಲಿ ಸಮಾಜದ 12 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ನಮ್ಮ ಸಮಾಜ ಬಹುಸಂಖ್ಯಾತ ಸಮಾಜವಾಗಿದೆ. ಆದರೆ ಬಿಜೆಪಿಯಿಂದ 33 ವರ್ಷಗಳಿಂದ ಈ ನಾಲ್ಕೂ ಕ್ಷೇತ್ರಗಳಲ್ಲಿಯೂ ಸಮಾಜದ ಅಭ್ಯರ್ಥಿಗೆ ಅವಕಾಶ ನೀಡಲಾಗಿಲ್ಲ. ಸಮಾಜದ ಸಂಘಟನೆಯಾಗಿ, ಸಮಾಜವನ್ನು ಗೆಲ್ಲಿಸಲು, ಪಕ್ಷವನ್ನು ಪಕ್ಕಕ್ಕಿಟ್ಟು ಸಮಾಜದ ಅಭ್ಯರ್ಥಿಗಳಾದ ಪದ್ಮರಾಜ್ ಆರ್., ಕೋಟ ಶ್ರೀನಿವಾಸ ಪೂಜಾರಿ ಹಾಗೂ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸುವ ಪ್ರಯತ್ನ ನಾರಾಯಣ ಗುರು ವಿಚಾರವೇದಿಕೆಯಿಂದ ಆಗಲಿದೆ. ಇವರು ಮೂವರು ಗೆದ್ದರೆ ಸಮಾಜಕ್ಕೆ ದೊಡ್ಡ ಶಕ್ತಿ ಸಿಗಲಿದೆ.
ಸುದ್ದಿಗೋಷ್ಟಿಯಲ್ಲಿ ಎಸ್‌ಎನ್‌ಜಿವಿಯ ಶಿವಮೊಗ್ಗ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವು ಹೂಗಾರ್, ಉಪಾಧ್ಯಕ್ಷ ಕೆ.ಪಿ. ಲಿಂಗೇಶ್, ಉಡುಪಿ ತಾಲೂಕು ಅಧ್ಯಕ್ಷ ಶಶಿಧರ ಎಂ. ಅಮೀನ್, ಉಡುಪಿ ಜಿಲ್ಲಾಧ್ಯಕ್ಷ ಜಗನ್ನಾಥ್ ಕೋಟೆ, ಮಂಗಳೂರು ಘಟಕದ ಸಂದೀಪ್ ಮೊದಲಾದವರು ಉಪಸ್ಥಿತರಿದ್ದರು.