ಕಾಪು: ಸಮಾಜ ಸೇವಕ ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ
ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ. ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು ಭಾಗದಲ್ಲಿ ಲೀಲಣ್ಣ ಎಂದೇ ಪ್ರಸಿದ್ಧಿ ಪಡೆದಿದ್ದರು. ಕಾಪು ರಂಗ ತರಂಗ ನಾಟಕ ತಂಡವನ್ನು ಕಟ್ಟಿಕೊಂಡು ಹಲವು ಕಡೆಗಳಲ್ಲಿ ಪ್ರದರ್ಶನ ನೀಡುತ್ತಿದ್ದರು.
ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಲೀಲಾಧರ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಮ್ಮೆ ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು. ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಲೀಲಾಧರ ಶೆಟ್ಟಿ ಕರಂದಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾಗಿದ್ದರು.ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.