ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ : ಸಿಎಂ
ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಭರ್ತಿಯಾಗಬೇಕಾಗಿದೆ. ಅವುಗಳಲ್ಲಿ ಮುಖ್ಯವಾಗಿ ಶಿಕ್ಷಕರ ಹುದ್ದೆ ಗಳು ಖಾಲಿ ಇವೆ. ಬಹುತೇಕವಾಗಿ ಹೊರಗುತ್ತಿಗೆ, ಗುತ್ತಿಗೆ ಆಧಾರದಲ್ಲಿ ಇಲಾಖೆಗಳಲ್ಲಿ ನೇಮಕಾತಿ ನಡೆಯುವುದರಿಂದ ಮೀಸಲಾತಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದ.ಕ. ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ದ.ಕ.ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಚರ್ಚೆಯ ಸಂದರ್ಭ ಈ ಪ್ರತಿಕ್ರಿಯೆ ನೀಡಿದರು.
ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದಾಗ, ಬೇಡಿಕೆ ಇರುವಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಕ್ರಮ ವಹಿಸಲಾಗುವುದು ಎಂದರು.
ದ.ಕ. ಜಿಲ್ಲೆಯಲ್ಲಿ ಸ್ಮಶಾನಗಳಿಗೆ ಕೊರತೆ ಇದೆಯೇ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸಾಕಷ್ಟು ವ್ಯವಸ್ಥೆ ಇದೆಯೇ ಎಂದು ಮುಖ್ಯಮಂತ್ರಿ ಪ್ರಶ್ನಿಸಿದಾಗ, ಜಿಲ್ಲೆಯಲ್ಲಿ ಅಂತಹ ಬೇಡಿಕೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದರು.
ಸುಳ್ಯದಲ್ಲಿ ಪರಿಶಿಷ್ಟರಿಗೆ ಸ್ಮಶಾನದ ಬೇಡಿಕೆ ಇದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಹೇಳಿದಾಗ, ಬೇಡಿಕೆ ಬಂದ ತಕ್ಷಣ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಖಾಲಿ ಇರುವ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ವಿಚಾರದ ಬಗ್ಗೆ ಶಾಸಕರು, ಮಂತ್ರಿಗಳ ಜತೆ ಚರ್ಚಿಸಿ ಶೀಘ್ರದಲ್ಲಿ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸರಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಜನರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಬೇಕು. ಜನರ ಸಮಸ್ಯೆಗಳು ಇತ್ಯರ್ಥವಾಗುವಲ್ಲಿ ವಿಳಂಬವಾದಾಗ ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದು. ಅಧಿಕಾರಿಗಳ ನಿರ್ಲಕ್ಷ್ಯತನ, ಭ್ರಷ್ಟಾಚಾರ, ಬೇಜಾವಾಬ್ದಾರಿ ವಿರುದ್ಧ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು.
ಅಧಿಕಾರಿಗಳು ಕ್ಷೇತ್ರಗಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥ ಮಾಡಬೇಕು. ಯಾವುದೇ ಅಧಿಕಾರಿಗಳು ಸ್ಪಂದನೆ ನೀಡದಿದ್ದರೆ ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಿ ಕ್ರಮ ವಹಿಸಬೇಕು. ಜನರಿಗೆ ಆಗುವ ತೊಂದರೆಗಳಿಗೆ ಅಧಿಕಾರಿಗಳು ಪ್ರಶ್ನಾರ್ಹರು. ಹಾಗಾಗಿ ಜನರಿಗೆ ಯಾವುದೇ ರೀತಿ ಕಿರುಕುಳ ಆದರೆ ಸಹಿಸುವುದಿಲ್ಲ. ಜಿಲ್ಲೆ ಆರೋಗ್ಯ, ಶಿಕ್ಷಣ ಸೂಚ್ಯಂಕದಲ್ಲಿ ಮೊದಲ ಸ್ಥಾನಕ್ಕೆ ಬರಲು ಪ್ರತಿ ತಿಂಗಳು ಸಭೆ ನಡೆಸಿ ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.