ಮಂಗಳೂರು : ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ತೈಲ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನ ಪಿವಿಎಸ್ ವೃತ್ತದ ಬಳಿ ಬಿಜೆಪಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಲೋಕಸಭೆ ಚುನಾವಣೆಯ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಏರಿಸಿ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ. ಬಡವರ ಜೇಬಿಗೆ ಕತ್ತರಿ ಹಾಕುವಂತಹ ನಿರ್ಣಯ ಸರಿಯಲ್ಲ. ಬಿಜೆಪಿ ನಿರಂತರವಾಗಿ ಜನಸಾಮಾನ್ಯರ ಪರವಾಗಿ ಹೋರಾಟ ಮಾಡುತ್ತಾ ಬಂದಿದೆ. ತೈಲ ಬೆಲೆ ಹಿಂಪಡೆಯುವವರೆಗೆ ಹೋರಾಟ ಮಾಡಲಿದ್ದೇವೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಜನತೆ ಈಗಾಗಲೇ ಬೇಸತ್ತು ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿ ಕಾರಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವಿಜಯಕುಮಾರ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ರವಿಶಂಕರ್ ಮಿಜಾರ್, ದಿವಾಕರ್ ಪಾಂಡೇಶ್ವರ್ ಮತ್ತಿತರರು ಪಾಲ್ಗೊಂಡಿದ್ದರು.