ಮೂಡುಶೆಡ್ಡೆಯಲ್ಲಿ ನಡೆದ ಘರ್ಷಣೆ ಹಿನ್ನೆಲೆ : ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ

ಬುಧವಾರ ಮತದಾನ ಮುಗಿದ ಬಳಿಕ ಕಾವೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯ ಹಿನ್ನೆಲೆಯಲ್ಲಿ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಾವೂರು, ಸುರತ್ಕಲ್ ಬಜ್ಪೆ, ಮೂಡುಬಿದಿರೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕಾನೂನು ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ 14ರ ಬೆಳಗ್ಗೆ 6ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆಯ ಅವಧಿಯಲ್ಲಿ ಘೋಷಣೆ ಕೂಗುವುದು ಪಟಾಕಿ ಸಿಡಿಸುವುದು, ಜಾಥಾ, ಧರಣಿ, ಪ್ರತಿಭಟನೆಗಳನ್ನು ನಡೆಸುವುದು, ಸಭೆ ಸಮಾರಂಭಗಳನ್ನು ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ ಭಿತ್ತಿ ಪತ್ರಗಳನ್ನು ಅಂಟಿಸುವುದು, ಮಾರಕಾಸ್ತ್ರಗಳನ್ನು ಹೊಂದಿರುವುದಕ್ಕೆ ನಿಷೇಧ ವಿಧಿಸಲಾಗಿದೆ. ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಉಪ ಪೊಲೀಸ್ಆಯುಕ್ತ ಅಂಶುಕುಮಾರ್ ತಿಳಿಸಿದ್ದಾರೆ.

ಮೂಡುಶೆಡ್ಡೆಯಲ್ಲಿ ಬುಧವಾರ ಸಂಜೆ ನಡೆದ ಅಹಿತಕರ ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್, ಕಲ್ಲು ತೂರಾಟದಿಂದ ಮೂವರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.

Related Posts

Leave a Reply

Your email address will not be published.