ಪಡುಬಿದ್ರಿ : ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಅವರು ಪಡುಬಿದ್ರಿಯ ನಡಿಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಈ ಬಾರಿ ತಡವಾಗಿ ಮಳೆ ಆರಂಭಗೊಂಡಿದ್ದರು ಸಹ ಪ್ರಾಕೃತಿಕ ವಿಕೋಪದಿಂದ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು ಇವರ ಕುಟುಂಬದವರಿಗೆ ತಲಾ ರೂ. ಐದು ಲಕ್ಷಗಳ ಪರಿಹಾರವನ್ನು ವಿತರಿಸಲಾಗಿದೆ ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.