ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪ- ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್
ಕೇಂದ್ರ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಗಳನ್ನು 70ಕ್ಕೆ ಏರಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪವಾಗಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಹೇಳಿದರು.
ಅವರು ವಿವೇಕಾನಂದ ಕಾಲೇಜು ಕ್ಯಾಂಪಸ್‍ನ ಕೇಶವ ಸಂಕಲ್ಪ ಸಭಾಭವನದಲ್ಲಿ ಪುತ್ತೂರು ವಿದ್ಯಾವರ್ಧಕ ಸಂಘದ ಇನ್‍ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದರು.
ಕೊರೊನಾ ಸಂದರ್ಭದಲ್ಲಿ ಭಾರತ ಆರೋಗ್ಯ ಕ್ಷೇತ್ರದ ಸವಾಲುಗಳನ್ನು ಅತ್ಯಂತ ಸಮರ್ಥವಾಗಿ ಎದುರಿಸಿ ಭಾರತದಲ್ಲೇ ಉತ್ಪಾದನೆಯಾದ ಲಸಿಕೆಯನ್ನು ಗ್ರಾಮದ ಮೂಲೆ ಮೂಲೆಗೂ ತಲುಪಿಸುವ ಕಾರ್ಯ ಮಾಡಿದೆ. ವಿಶ್ವದ ಯಾವುದೇ ದೇಶದಲ್ಲಿ ಇಷ್ಟೊಂದು ಅಗಾಧ Àಪ್ರಮಾಣದಲ್ಲಿ ಈ ಕಾರ್ಯ ನಡೆದಿಲ್ಲ. ದೇಶದಲ್ಲಿ 1.5 ಲಕ್ಷ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಿ 30 ವರ್ಷ ದಾಟಿದ ವ್ಯಕ್ತಿಗಳನ್ನು ಕಾಡುವ ಕ್ಯಾನ್ಸರ್, ಮಧುಮೇಹ, ಅಧಿಕ ರಕ್ತದೊತ್ತಡ ಪರೀಕ್ಷೆಗಳನ್ನು ಈ ಕೇಂದ್ರದಲ್ಲಿ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಬೆಂಗಳೂರಿನ ರಾಜೀವಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ಸಿಂಡಿಕೇಟ್ ಸದಸ್ಯರಾದ ಡಾ. ಎಸ್. ರಾಮಚಂದ್ರ ಶೆಟ್ಟಿ ಅವರು ಮಾತನಾಡಿ, ಭಾರತ ಇಂದು ಕೈಗೆಟಕುವ ದರದಲ್ಲಿ ಔಷಧಿ ತಯಾರಿಸುವ ಕೌಶಲ್ಯ ಪಡೆದಿದೆ.
ಔಷಧ ವಿಜ್ಞಾನ ಕ್ಷೇತ್ರದಲ್ಲಿ ತನ್ನ ಸಾಧನೆಯ ಮೂಲಕ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಭಾರತದ ಔಷಧಿ ಮತ್ತು ವ್ಯಾಕ್ಸಿನ್ ಜಗತ್ತನ್ನೇ ಆಳುತ್ತಿದೆ ಎಂದು ಹೇಳಿದರು.
ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ಫಾರ್ಮಸಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ. ಗೋಪಿನಾಥ ಶೆಟ್ಟಿ, ಆಡಳಿತ ಮಂಡಳಿಯ ಸಂಚಾಲಕ ಗೋವಿಂದ ಪ್ರಕಾಶ್ ಸಾಯ ಮತ್ತು ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ್ ಡಾ.ಗುರುರಾಜ ಎಂ.ಪಿ ವೇದಿಕೆಯಲ್ಲಿದ್ದರು.