ಮಳೆ ಹಾನಿಗೆ ತಕ್ಷಣ ಸ್ಪಂದಿಸಿ: ದ.ಕ. ಜಿಲ್ಲಾಡಳಿತಕ್ಕೆ ಸಚಿವ ದಿನೇಶ್ ಗುಂಡೂರವ್ ಸೂಚನೆ

ಮಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದರು.ರಸ್ತೆ ಮಾರ್ಗಗಳಲ್ಲಿ ಗುಡ್ಡ ಕುಸಿತವಾದ ಸ್ಥಳಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ನ್ಯಾಷನಲ್ ಹೈವೇ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಸ್ತೆ ಸಂಪರ್ಕ ಕಡಿತವಾದ ಸ್ಥಳಗಳಲ್ಲಿ ಸಮಸ್ಯೆ ಬಗೆಹರಿಸಿ. ನೀರು ನುಗ್ಗಿರುವ ತಗ್ಗು ಪ್ರದೇಶಗಳಲ್ಲಿ ಕುಟುಂಬಗಳನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಸಚಿವರು ಸೂಚಿಸಿದರು.
ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಕಂಟ್ರೋಲ್ ರೂಂ ನಿರಂತರ ಕಾರ್ಯಾಚರಣೆಯಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಪ್ರಾಕೃತಿಕ ವಿಕೋಪ ಕಾರ್ಯಾಚರಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.