ಮಾರ್ಚ್ 25ರಿಂದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದ್ದು, ಈ ಬಾರಿ ಒಟ್ಟು 2,750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ನಡೆಯಲಿದೆ. ಹೀಗಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧ ಮಾಡಲಾಗಿದ್ದು, ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ರಾಜ್ಯಾದ್ಯಂತ 4,41,910 ಬಾಲಕರು ಹಾಗೂ 4,28,058 ಬಾಲಕಿಯರು ಸೇರಿ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಇದ್ದಾರೆ.

5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್‌, ಹಿಂದಿ, ತೆಲುಗು, ತಮಿಳು, ಉರ್ದು, ಮರಾಠಿ ಸೇರಿ ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅವ್ಯವಹಾರಗಳ ಬಗ್ಗೆ ನಿಗಾವಹಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರಾಗಿ ನೇಮಿಸಲಾಗಿದೆ. ಡಯಟ್ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

Related Posts

Leave a Reply

Your email address will not be published.