ಮಂಗಳೂರಲ್ಲಿ ಟೈಲರ್ ಅಸೋಸಿಯೇಶನ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚಿಸುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದ.ಕ. ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟೈಲರ್‍ಗಳು ಬೀದಿಗಿಳಿದು ಪ್ರತಿಭಟಿಸಿದರು. ಕರ್ನಾಟಕ ರಾಜ್ಯ ಟೈಲರ್ ಸಂಘಟನೆಯ ಕರೆಯ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಮಂಗಳೂರಿನ ಬಲ್ಮಠ ಬಳಿಯ ಶಾಂತಿನಿಲಯ ಸಮೀಪದ ಮೈದಾನದಿಂದ ನಗರದ ಜಿಲ್ಲಾಧಿಕಾರಿ ಕಚೇರಿವರೆಗೆ ಸುಮಾರು ಎರಡು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಟೈಲರ್‍ಗಳು ಭಾಗವಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಳೆದ 23 ವರ್ಷಗಳಿಂದ ಹಲವಾರು ರೀತಿಯ ಹೋರಾಟ ಹಾಗೂ ಸರಕಾರಕ್ಕೆ ಹಲವು ಮನವಿಗಳನ್ನು ಸಲ್ಲಿಸಿದರೂ ನಮ್ಮ ಬೇಡಿಕೆಯನ್ನು ಈಡೇರಿಸಲಾಗಿಲ್ಲ. ಅದಕ್ಕಾಗಿ ಇಂದು ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಇದಕ್ಕೆ ನಮಗೆ ಸ್ಪಂದನೆ ದೊರೆಯದಿದ್ದರೆ ಮುಂದೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ನ ಜಿಲ್ಲಾ ಸಮಿತಿ ಅಧ್ಯಕ್ಷರಾದ ಜಯಂತ ಉರ್ಲಾಂಡಿ ಹೇಳಿದರು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಅಸೋಸಿಯೇಶನ್ ವತಿಯಿಂದ ಮನವಿ ಸಲ್ಲಿಸಲಾಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ದ.ಕ. ಜಿಲ್ಲೆಯ ವಿವಿಧ ವಲಯಗಳ ಟೈಲರ್ ಪ್ರತಿನಿಧಿಗಳು ಭಾಗವಹಿಸಿದ್ದರು. ಅಸೋಸಿಯೇಶನ್‍ನ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕುಮಾರ್, ದ.ಕ. ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಲಿಗೋಧರ, ಕೋಶಾಧಿಕಾರಿ ಈಶ್ವರ ಕುಲಾಲ್ ಹಾಗೂ ಇತರರು ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿದ್ದರು.

Related Posts

Leave a Reply

Your email address will not be published.