ಉಡುಪಿ ವಿಡಿಯೋ ಪ್ರಕರಣ – ಪ್ರಚೋದನಕಾರಿ ಭಾಷಣ ಆರೋಪ ; ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡುತ್ತೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು. ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ, ಹಿಡಿಯಲು ಸಿದ್ಧರಾಗಬೇಕು, ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕು ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದರು.

ಅದೇ ರೀತಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಹಿಂಪ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಕೂಡ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಂದೋಬಸ್ತಿನಲ್ಲಿದ್ದ ಸ್ಥಳೀಯ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related Posts

Leave a Reply

Your email address will not be published.