Header Ads
Breaking News

ಕರಾವಳಿ ಜಿಲ್ಲೆಗೆ ಕುಚ್ಚಲಕ್ಕಿ ಪೂರೈಕೆಗೆ ಕ್ರಮ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ, ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಶ್ರೀ ಉಮೇಶ್ ಕತ್ತಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಭತ್ತದ ತಳಿಗಳಾದ MO4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ಸುದೀರ್ಘ ಚರ್ಚೆ ನಡೆಸಿ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ಥಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಂಡಿತು. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದ ಅವರು,ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಪೂರೈಕೆ ಆಗಬೇಕಾಗಿದ್ದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ಹಂಚಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ಆಹಾರ ಮತ್ತು ನಾಗರೀಕ ಪೂರೈಕೆ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *