Header Ads
Breaking News

ಮೇ 7ರಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ರೂಲ್ಸ್ ಜಾರಿ: ದ.ಕ. ಜಿಲ್ಲಾಧಿಕಾರಿ

ಮಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮೇ 7ರಿಂದ ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಟಫ್ ರೂಲ್ಸ್ ಜಾರಿಗೆ ತರಲು ನಿರ್ಧರಿಸಿದೆ.

ದ.ಕ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲೂ ಕೊರೋನಾ ಪ್ರಕರಣ ಹೆಚ್ಚುತ್ತಿರುವುದರಿಂದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಸದರು, ಶಾಸಕರ ಜೊತೆ ತುರ್ತು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಎಂಬ ಸಲಹೆಗಳು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಂದ ಕೇಳಿಬಂದಿದ್ದು ಇದರಂತೆ ಜಿಲ್ಲಾಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇದರಂತೆ, ದಿನಸಿ ಖರೀದಿಗೆ ಮತ್ತು ಜನರ ಓಡಾಟದ ವಿಚಾರದಲ್ಲಿ ಕೆಳಗಿನಂತೆ ಕ್ರಮ ಜರುಗಿಸಲಾಗಿದೆ. ಜಿಲ್ಲೆಯಾದ್ಯಂತ ಮೇ 7 ರ ಬೆಳಗ್ಗೆ 6 ರಿಂದ 9 ಗಂಟೆ ವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇರಲಿದೆ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. 10 ಗಂಟೆಯ ಬಳಿಕ ಜನರು ರಸ್ತೆ ಮೇಲೆ, ವಾಹನಗಳಲ್ಲಿ ಓಡಾಡುವುದು ಕಂಡುಬಂದರೆ ವಾಹನ ಜಪ್ತಿ ಸೇರಿದಂತೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ.

ಮೇ 15 ಬಳಿಕ ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ಇರುವುದಿಲ್ಲ. ಮೇ 15 ರ ಬಳಿಕ ನಿಗದಿಯಾಗಿರುವ ಎಲ್ಲ ರೀತಿಯ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲು ಜಿಲ್ಲಾಡಳಿತ ನಿರ್ಣಯ ಮಾಡಿದೆ. ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಪಡೆದಿದ್ದರೂ ಆಯಾ ಭಾಗದ ಅಧಿಕಾರಿಗಳು ಸಂಬಂಧಿತರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್, ಸಂಸದ ನಳಿನ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಮಾಜಿ ಸಚಿವ ಯು.ಟಿ.ಖಾದರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *