ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡಲು ಚಿಂತನೆ: ಪುತ್ತೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳಿಂದ ಹಡೀಲು ಬಿದ್ದ ಭೂಮಿಗಳ ಗುರುತಿಸುವಿಕೆ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು ಹಡೀಲು ಬಿದ್ದಿರುವ ಕಂದಾಯ ಇನ್ನಿತರ ಭೂಮಿಯನ್ನು ಗುರುತಿಸಿ ಅವುಗಳಲ್ಲಿ ಗದ್ದೆ ನಾಟಿ ಮಾಡುವ ಬಗ್ಗೆ ರೈತರಿಗೆ ಪ್ರೇರಣೆ ನೀಡುವಂತೆ ಕೃಷಿ, ತೋಟಗಾರಿಕೆ ಮತ್ತು ಕೃಷಿ ಸಂಬಂಧಿತ ಇತರ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಡೀಲು ಬಿದ್ದಿರುವ ಕಂದಾಯ ಪ್ರದೇಶ, ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಪೂರ್ಣ ಪ್ರಮಾಣದಲ್ಲಿ ಭತ್ತ ಕೃಷಿ ಬೆಳೆಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಚಿವರು ಈ ಭಾಗದ ಕೃಷಿಕರಿಗೆ ಅಧಿಕಾರಿಗಳು ಸಮರ್ಪಕ ಮಾಹಿತಿಗಳೊಂದಿಗೆ ಪೆÇ್ರೀತ್ಸಾಹ ನೀಡಬೇಕು. ಅವರ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು, ತಾಪಂ ಕಾರ್ಯ ನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಕೃಷಿ ಇಲಾಖೆಯ ಜಂಟೀ ನಿರ್ದೇಶಕಿ ಸೀತಾ ಉಪಸ್ಥಿತರಿದ್ದರು.