ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ
ಮಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಲೀನ್ ಇಂಡಿಯಾ ಕಾರ್ಯಕ್ರಮ ಆಯೋಜಿಸುವ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ಆಂದೋಲನದ ಮುಖ್ಯ ಉದ್ದೇಶ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ. ಅದಕ್ಕಾಗಿ, ಜಿಲ್ಲೆಯ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಬೇಕು, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ನಿರ್ಮಿಸಿದ ರಸ್ತೆ ಬದಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಬೇಕು ಈ ಆಂದೋಲನವನ್ನು ಬಳಸಿಕೊಂಡು ಹೆಚ್ಚಿನ ತ್ಯಾಜ್ಯ ಸಂಗ್ರಹಿಸಿ ಅದನ್ನು ವಿಲೇವಾರಿಗೆ ಸಾಗಿಸಬೇಕು ಹಾಗೂ ಪ್ಲಾಸ್ಟಿಕ್ ಬಳಕೆಯ ದುಷ್ಟರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಕ್ಲೀನ್ ಇಂಡಿಯಾ ಆಂದೋಲನ ಯಶಸ್ವಿಯಾಗಲು ಜನರ ಸಹಭಾಗಿತ್ವ ಅತ್ಯಂತ ಅಗತ್ಯ. ಹಾಗಾಗಿ ಸಾರ್ವಜನಿಕರು ,ಸಂಘ ಸಂಸ್ಥೆಗಳನ್ನು ಈ ಚಟುವಟಿಕೆಗಳಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು, ದೇವಸ್ಥಾನಗಳು, ಬ್ಯಾಂಕುಗಳು ಸೇರಿದಂತೆ ಸಾರ್ವಜನಿಕರ ಹೆಚ್ಚಿನ ಓಡಾಟಗಳಿರುವ ಪ್ರದೇಶಗಳಲ್ಲಿ, ನೀರಿನ ಮೂಲಗಳಲ್ಲಿ ಕಂಡು ಬರುವ ತ್ಯಾಜ್ಯವನ್ನು ತೆರವು ಮಾಡಬೇಕು, ಗ್ರಾಮೀಣ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಲೆಕ್ಕಿಗರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯ ನೆಹರು ಯುವ ಕೇಂದ್ರ ಹಾಗೂ ಎನ್ಎಸ್ಎಸ್ ವತಿಯಿಂದ ಗಾಂಧಿ ಜಯಂತಿಯ ದಿನವಾದ ಅಕ್ಟೋಬರ್ 2ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು, ಹಾಗೂ ಅಂದಿನಿಂದಲೇ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಲವು ಚಟುವಟಿಕೆಗಳನ್ನು ಆಯೋಜಿಸಿಕೊಂಡು ಆಯಾ ದಿನಗಳಂದೇ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಯವರು ಸಲಹೆ ನೀಡಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಜಿಲ್ಲಾ ಲೀಡ್ ಬ್ಯಾಂಕ್ನ ಪ್ರಬಂಧಕ ಪ್ರವೀಣ್, ಯುವ ಸಬಲೀಕರ ಮತ್ತು ಕ್ರೀಡಾ ಇಲಾಖೆ ಉಪನಿದೇರ್ಶಕ ಪ್ರದೀಪ್ ಡಿಸೋಜಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಜಿ.ನರೇಂದ್ರ ಬಾಬು, ನೆಹರು ಯುವ ಕೇಂದ್ರದ ಅಧಿಕಾರಿ ರಘುವೀರ್ ಸೂಟರ್ಪೇಟೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಭೆಯಲ್ಲಿದ್ದರು.