ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ:ಲೋಕಾಯುಕ್ತ ನಿರೀಕ್ಷಕ ಅಮಾನುಲ್ಲಾ
ಮಂಗಳೂರು: ಕರ್ನಾಟಕ ಲೋಕಾಯುಕ್ತ, ನಗರದ ರಥಬೀದಿಯ ಡಾ. ದಯಾನಂದ ಪೈ – ಪಿ. ಸತೀಶ್ ಪೈ ಸರಕಾರಿ ಪ್ರಥಮದರ್ಜೆ ಸಹಯೋಗದಲ್ಲಿ ವಿಚಕ್ಷಣ ಜಾಗೃತಿ ಸಪ್ತಾಹ -2021ರ ಅಂಗವಾಗಿ ಪ್ರತಿಜ್ಞಾವಿಧಿ, ಜಾಗೃತಿ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಲೋಕಾಯುಕ್ತದ ಮಂಗಳೂರು ನಿರೀಕ್ಷಕರಾದ ಅಮಾನುಲ್ಲಾ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣದ ಜವಬ್ದಾರಿ ಪ್ರತಿಯೊಬ್ಬ ಭಾರತೀಯರದ್ದಾಗಿದೆ, ಅದರಲ್ಲೂ ಯುವ ಸಮಾಜ ಸ್ಪಂದಿಸಿದ್ದಲ್ಲಿ ಹಾಗೂ ಎಚ್ಚೆತ್ತ ನಾಗರೀಕರಿಂದ ಇದು ಸುಲಭ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ರಥಬೀದಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕಿ ಪ್ರಿಯಾ ರಾವ್ ಮಾತನಾಡಿ, ಸ್ವಚ್ಛ ಭಾರತ ಅಭಿಯಾನದಲ್ಲಿ ಭ್ರಷ್ಟಾಚಾರ ನಿರ್ಮೂಲನೆಯೂ ಒಂದು ಭಾಗವಾಗಿದ್ದು ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರಾಜಶೇಖರ ಹೆಬ್ಬಾರ್ ಮಾತನಾಡಿ ಶ್ರೀಮಂತ ಯುವ ರಾಷ್ಟ್ರವಾದ ಭಾರತದಲ್ಲಿ ಯುವಕರು ಸಂಘಟಿತರಾಗಿ ಭ್ರಷ್ಟಾಚಾರದ ವಿರುದ್ಧ ಹೋರಾಡಿ ದೇಶದ ಘನತೆಯನ್ನು ಎತ್ತಿ ಹಿಡಿಯುವಂತೆ ಕೋರಿದರು.
ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರದ ವಿರುದ್ದ ಜಾಗೃತಿ – ಚಿಂತನೆ ಮೂಡಿಸುವ ನಿಟ್ಟಿನಲ್ಲಿ ಲೋಕಾಯುಕ್ತ ವತಿಯಿಂದ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ಯೂನಿಯನ್ ಬ್ಯಾಂಕ್ ವತಿಯಿಂದ ಸ್ವತಂತ್ರ ಭಾರತ ಅಟ್ 75 ದೇಶದ ಮುಂದಿರುವ ಸವಾಲುಗಳು ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಇಂಗ್ಲೀಷ್ ಪದವನ್ನು ಕನ್ನಡಕ್ಕೆ ಭಾಷಾಂತರಿಸುವ ಸ್ವರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಸಭೆಯಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.
ಕನ್ನಡ ವಿಭಾಗದ ಉಪನ್ಯಾಸಕ ಡಾ. ರವಿಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಕೃಷ್ಣ ಪ್ರಭ ಎಂ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.