HomeFresh Newsಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮುಂದುವರಿಯಲಿದೆ: ಸಚಿವ ಕೆ ಗೋಪಾಲಯ್ಯ

ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮುಂದುವರಿಯಲಿದೆ: ಸಚಿವ ಕೆ ಗೋಪಾಲಯ್ಯ

ಹಾಸನ :ಮುಂದಿನ ಅವಧಿಯ 21 ತಿಂಗಳು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ಮುಂದುವರಿಯಲಿದೆ ಇದರಲ್ಲಿ ಯಾವುದೇ ಗೊಂದಲ ಬೇಡ  ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟಪಡಿಸಿದರು.


ನಗರದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರದಲ್ಲಿ ಇರಲಿದ್ದಾರೆ . ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಎಲ್ಲರೂ ಸಹಕಾರ ನೀಡಲಿದ್ದು ಮುಂದಿನ ಅವಧಿಗೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಶಾಸಕ ಪ್ರೀತಂ ಗೌಡ ಹಾಗೂ ಸೋಮಣ್ಣ ನಡುವಿನ ವಾಕ್ಸಮರ ಮುಗಿದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಆರ್ ಅಶೋಕ್ ಅವರು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿದ್ದಾರೆ.ಇದೀಗ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದರು.ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಬಗ್ಗೆ ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ಅಪಾರ ಗೌರವವಿದೆ ಮುಖ್ಯಮಂತ್ರಿಗಳು ಅವರ ಮನೆಗೆ ಹೋಗಬೇಕು ಬೇಡವೋ ಎಂಬುದು ಅವರ ಪರಮಾಧಿಕಾರ ಈ ಬಗ್ಗೆ ಪ್ರಶ್ನೆ ಮಾಡುವ ಯಾವುದೇ ಹಕ್ಕು ಯಾರಿಗೂ ಇಲ್ಲ ಎಂದು ತಿಳಿಸಿದರು .ಜೆಡಿಎಸ್ ನವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹೋಗಬಾರದು ಎಂಬುದು ಪ್ರೀತಮ್ ಗೌಡ ಅವರ ವೈಯಕ್ತಿಕ ಹೇಳಿಕೆಯಾಗಿದೆ. ದೇವೇಗೌಡರ ಮನೆಗೆ ಹೋಗುವುದು ಅವರಿಗೆ ಕೊಡುವಂತಹ ಗೌರವವಾಗಿದೆ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು .

ಜವಾಹರ್ ಲಾಲ್ ನೆಹರೂ ಹಾಗೂ ಇಂದಿರಾ ಕ್ಯಾಂಟೀನ್ ಬಗ್ಗೆ ಸಿಟಿ ರವಿ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಸಿಟಿ ರವಿ ಅವರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರು ಮಾತನಾಡುವ ವೇಳೆ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಿರುತ್ತಾರೆ ಎಂದು ಸಮರ್ಥನೆ ಮಾಡಿಕೊಂಡರು .ಅಲ್ಲದೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಕೇವಲ ಮಾಧ್ಯಮಗಳಲ್ಲಿ ಈ ಬಗ್ಗೆ ತಿಳಿದುಕೊಂಡಿದ್ದೇವೆ ಎಂದು ಸಚಿವರು ತಿಳಿಸಿದರು.ಬಸವರಾಜ ಬೊಮ್ಮಾಯಿ ಅವರು ಅಧಿಕಾರಕ್ಕೆ ಬಂದ ನಂತರ ವೃದ್ಧಾಪ್ಯ ವೇತನ ,ವಿಧವಾ ವೇತನ ಹಾಗೂ ಅಂಗವಿಕಲರ ವೇತನದಲ್ಲಿ ಹೆಚ್ಚಳ ಮಾಡಲಾಗಿದೆ. ಇದರಿಂದ ಲಕ್ಷಾಂತರ ಮಂದಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ.ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 272 ಕೋಟಿ ರು ಹಾನಿ ಸಂಭವಿಸಿದೆ ಎನ್ ಡಿ ಆರ್ ಎಫ್ ನಿಂದ 50 ಕೋಟಿ ರೂ ಬಿಡುಗಡೆಗೆ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗಿದ್ದು ಹಂತಹಂತವಾಗಿ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು.

ಮುಂದಿನ ವಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಸಭೆ ಕರೆದು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಗಸ್ಟ್ 17ರಂದು ಶೋಭಾಕರಂದ್ಲಾಜೆ ಹಾಸನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಅವರೊಂದಿಗೆ ಚರ್ಚಿಸಿ ಜಿಲ್ಲೆಯಲ್ಲಿನ ಕಾಫಿ ಬೆಳೆಗಾರರ ಸಮಸ್ಯೆ ಹಾಗೂ ಆನೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಲಾಗುವುದು ಹಾಗೂ ಸಭೆ ಕರೆದು ಚರ್ಚೆ ನಡೆಸಲಾಗುವುದು ಇನ್ನೆರಡು ದಿನದಲ್ಲಿ ಶಿರಾಡಿಘಾಟ್ ರಸ್ತೆ ಸಂಚಾರ ಮುಕ್ತವಾಗಲಿದೆ. ಈಗಾಗಲೇ ಕಾಮಗಾರಿ ಮುಗಿದಿದ್ದು ಸುಗಮ ಸಂಚಾರಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಮಳೆ ನಿಂತ ನಂತರ ಹಾಸನದಿಂದ ಸಕಲೇಶಪುರ ವರೆಗಿನ ರಸ್ತೆಗೆ ದುರಸ್ತಿ ಹಾಗೂ ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಎಂಜಿನಿಯರ್ಗಳು ತಿಳಿಸಿದ್ದು; ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಲಾಗಿದೆ.ಮತ್ತು ನೂತನ ಬಸ್ ನಿಲ್ದಾಣ ಸಂಪರ್ಕ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸಂಬಂಧ ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಮುಂದಿನ ವಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಮಾಡಲಾಗುವುದು ಎಂದು ಸಚಿವರು ಇದೇ ವೇಳೆ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments