ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸಿದ ನೆಹರು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ತಿಳಿಸಿದರು.

ಇಂದು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿ ಮಾತನಾಡುತ್ತಿದ್ದರು.ರಾಷ್ಟ್ರದ ಆಡಳಿತದ ಚುಕ್ಕಾಣಿಯನ್ನು ಬ್ರಿಟಿಷರಿಂದ ಭಾರತಕ್ಕೆ ತೆಗೆದುಕೊಂಡು ಮುಂದಿನ ಆಡಳಿತವನ್ನು ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದ ನೆಹರು ಅವರು ಕೈಗಾರಿಕೆ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ತಿಳಿಸಿದರು.

 

ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಪರ್ಕ ಹೊಂದಿ ಕಾರ್ಯನಿರ್ವಹಿಸಿದವರು. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜೈಲು ವಾಸ ಅನುಭವಿಸಿದ ನೆಹರೂರವರ ಆದರ್ಶಗಳ ಪಾಲನೆ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿಯವರು ತಿಳಿಸಿದರು.ಮೆಟ್ರೋ ಕಾಮಗಾರಿಯಿಂದಾಗಿ ಸ್ಥಳಾಂತರಗೊಂಡಿದ್ದ ಮಾಜಿ ಪ್ರಧಾನಿ ಜವಾಹರ್ ಲಾಲ್ ಅವರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪಿಸುವ ಮೂಲಕ ವಿಧಾನಸೌಧದ ಮೆರಗು ಹೆಚ್ಚಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ:ಕೆ.ಸುಧಾಕರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.