ಶಕ್ತಿಯುತ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್: ಡಿ.ಕೆ.ಶಿವಕುಮಾರ್
ಮಂಗಳೂರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಂಸ್ಥೆಯನ್ನು ರಾಜ್ಯದಲ್ಲಿ ಶಕ್ತಿಯುತವಾಗಿ ಸಂಘಟಿಸಲಾಗುವುದು ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾ ಪದಾಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಸಂಘಟನೆಯನ್ನು ಬಲಪಡಿಸುವ ಸಲುವಾಗಿಯೇ ಹಿರಿಯ ಮುಖಂಡ ಸಿ.ನಾರಾಯಣ ಸ್ವಾಮಿ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸಂಘಟನೆಯನ್ನು ಗ್ರಾಮೀಣ ಮಟ್ಟದಿಂದ ಬಲಪಡಿಸಲು ನಾರಾಯಣ ಸ್ವಾಮಿ ಮಾರ್ಗದರ್ಶನ ಮಾಡಲಿದ್ದಾರೆ ಎಂದು ತಿಳಿಸಿದರು.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾಧ್ಯಕ್ಷ ಶುಭೋದಯ ಆಳ್ವ ಅವರು ಶಿವಕುಮಾರ್ ಅವರನ್ನು ಮಂಗಳೂರಿನಲ್ಲಿ ಗುರುವಾರ ಸಂಜೆ ಭೇಟಿ ವೇಳೆ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್, ಹಿರಿಯ ಮುಖಂಡ ಅಶ್ವಿನ್ ಕುಮಾರ್ ರೈ, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

















