ವಾರಾಂತ್ಯದ ಕರ್ಫ್ಯೂ ಹಿನ್ನೆಲೆ: ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಈ ವಾರ ಅವಕಾಶ: ಡಿಸಿ ಡಾ. ರಾಜೇಂದ್ರ ಕೆ.ವಿ

ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ, ಒಳಾಂಗಣ 100 ಜನರಿಗೆ ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದರು.

ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಸಾರ್ವಜನಿಕ ಕಾರ್ಯಕ್ರಮಗಳಿಗೆ ಈ ವಾರ ಅವಕಾಶ ಕಲ್ಪಿಸಲಾಗುತ್ತಿದೆ. ಮುಂದಿನ ವಾರದಿಂದ ಕರ್ಫ್ಯೂ ಮುಂದುವರಿದರೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗುವುದು. ಸುಬ್ರಹ್ಮಣ್ಯ, ಕಟೀಲು, ಧರ್ಮಸ್ಥಳ ಕ್ಷೇತ್ರ ಸೇರಿದಂತೆ ಎಲ್ಲಾ ದೇವಾಲಯ, ಚರ್ಚ್, ಮಸೀದಿಗಳಲ್ಲಿ ವೀಕೆಂಡ್ ಕರ್ಫ್ಯೂನಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕಂಬಳ, ಧರ್ಮನೇಮ, ಬ್ರಹ್ಮಕಲಶೋತ್ಸವ ಸೇರಿದಂತೆ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ಕೂಡಾ ಮುಂದೂಡುವಂತೆ ಸೂಚಿಸಲಾಗಿದೆ. ನಿಗದಿತ ಸಮಯದಲ್ಲೇ ಮಾಡಬೇಕಾದ ಕೆಲವೊಂದು ಸಾಂಪ್ರದಾಯಿಕ ಕಾರ್ಯಕ್ರಮಗಳಿದ್ದಲ್ಲಿ ಅವುಗಳನ್ನು 200 ಮಂದಿಗೆ ಸೀಮಿತಗೊಳಿಸಿ ನಡೆಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಸೇರುವಿಕೆಯನ್ನು ನಿಯಂತ್ರಿಸುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರ ಜತೆಯಲ್ಲೇ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ವೈದ್ಯಕೀಯ ಪರಿಣಿತರು, ಮಾಲ್, ಬಸ್ಸು, ಹೊಟೇಲ್- ರೆಸ್ಟೋರೆಂಟ್ ಮಾಲಕರ ಜತೆ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ವೈದ್ಯಕೀಯ ತಜ್ಞ ಡಾ. ಶಾಂತಾರಾಮ ಬಾಳಿಗ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *

How Can We Help You?