ಚಂದ್ರಶೇಖರ ಪಾಟೀಲ (ಚಂಪಾ) ನಿಧನ

ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ, ಕಸಾಪ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಚಂಪಾ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತಾದರು.

ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದರು. ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧನಾ ವೃತ್ತಿ ಆರಂಭಿಸಿದರು.

ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಬೇಂದ್ರೆ-ನಾ ಕಂಡಂತೆ, ನನಗೆ ಕಂಡಷ್ಟು26 ದಿನ 25 ರಾತ್ರಿ, ಕನ್ನಡ ಕನ್ನಡ ಬರ್ರಿ‍ ನಮ್ಮ ಸಂಗಡ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ‘ಸಂಕ್ರಮಣ’ ಪತ್ರಿಕೆಯ ಮೂಲಕ ಸಾಹಿತ್ಯ ಚರ್ಚೆಗೆ ಹೊಸ ದಿಕ್ಕು ತೋರಿದವರು ಚಂಪಾ. ದಲಿತ,ಬಂಡಾಯ ಸಾಹಿತ್ಯದ ಯುವ ಬರಹಗಾರರಿಗೆ ಸಂಕ್ರಮಣ ವೇದಿಕೆಯಾಗಿತ್ತು.

ನಾಡು ನುಡಿಯ ವಿಚಾರದಲ್ಲಿ ಚಂಪಾ ದಿಟ್ಟ ದನಿ. ಕನ್ನಡ ಸಾಹಿತ್ಯ ಪರಿಷತ್‌, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ. 2017ರಲ್ಲಿ ಮೈಸೂರಿನಲ್ಲಿ ನಡೆದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಅವರ ಸಾಹಿತ್ಯ ಸೇವೆಗಾಗಿ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್‌ ಮಾಧ್ಯಮ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಅವರಿಗೆ ಸಂದಿವೆ.

ಚಂಪಾ ನಿಧನಕ್ಕೆ ಸಂತಾಪ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. “ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ, ಅಭಿಮಾನಿಗಳು ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ” ಎಂದು ಮುಖ್ಯಮಂತ್ರಿಯವರು ಸಂತಾಪ ವ್ಯಕ್ತ ಪಡಿಸಿದ್ದಾರೆ.

Related Posts

Leave a Reply

Your email address will not be published. Required fields are marked *

How Can We Help You?