ಹಿಜಾಬ್- ಕೇಸರಿ ವಿವಾದ; ಹಿಜಾಬ್ ಧರಿಸಿದ 58 ವಿದ್ಯಾರ್ಥಿಗಳು ಅಮಾನತು

ಬೆಂಗಳೂರು: ಹಿಜಾಬ್- ಕೇಸರಿ ಶಾಲು ವಿವಾದದ ಸಂಬಂಧವಾಗಿ ನಿನ್ನೆ ಹೈಕೋರ್ಟ್ ತ್ರಿ ಸದಸ್ಯ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಇಂದು ಶಿವಮೊಗ್ಗ ಜಿಲ್ಲೆಯ ಶಿರಾಳ ಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 58 ವಿದಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ.
ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹಿಜಾಬ್ ಧರಿಸಿ ತರಗತಿಗೆ ಆಗಮಿಸದಂತೆ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅಭಿವೃದ್ಧಿ ಸಮಿತಿ ಮನವರಿಕೆ ಮಾಡಿತ್ತು, ಆದರೂ ವಿದ್ಯಾರ್ಥಿಗಳು ಹಿಜಾಬ್ ತೆಗೆಯಲು ನಿರಾಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಆದರಿಂದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.
ವಿದ್ಯಾರ್ಥಿಗಳು ಕಾಲೇಜು ಸಿಬ್ಬಂದಿಗಳೊಂದಿಗೆ ವಾಗ್ವಾದಕ್ಕಿಳಿದಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ನಿಭಾಯಿಸಿದ್ದಾರೆ. ಬೆಳಗಾವಿ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ.