ಸಹಕಾರ ರತ್ನ ಪ್ರಶಸ್ತಿ ಪಡೆದ ಸವಣೂರು ಕೆ. ಸೀತಾರಾಮ ರೈ

ಪುತ್ತೂರು: ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ಪಡೆದಿರುವ, ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕರೂ, ಆದರ್ಶ ಸಹಕಾರಿ ಸಂಘದ ಅಧ್ಯಕ್ಷರೂ, ಜಿಲ್ಲೆಯ ಹಿರಿಯ ಸಹಕಾರಿ ಧುರೀಣರೂ ಆಗಿರುವ ಸವಣೂರು ಕೆ. ಸೀತಾರಾಮ ರೈ ಅವರಿಗೆ ನಾಗರಿಕ ಸಮ್ಮಾನ ಸಮಾರಂಭ ಏಪ್ರಿಲ್ 2ರಂದು ಪುತ್ತೂರು ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಮ್ಮಾನ ಸಮಿತಿಯ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು.

ಮಂಗಳವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ಅವಿಸ್ಮರಣೀಯ ಕಾರ್ಯಕ್ರಮವಾಗಿದೆ. ಸಹಕಾರಿ ಕ್ಷೇತ್ರವೂ ಸೇರಿದಂತೆ ಸಮಾಜದ ನಾನಾ ಕ್ಷೇತ್ರಗಳಿಗೆ ಅಪೂರ್ವ ಕೊಡುಗೆ ನೀಡಿರುವ ಸೀತಾರಾಮ ರೈ ಅವರ ಸಮ್ಮಾನ ಕಾರ್ಯಕ್ರಮಕ್ಕೆ “ಸೀತಾಭಿಮಾನ’ ಎಂಬ ಹೆಸರಿಡಲಾಗಿದೆ. ಸಮಾಜದ ಎಲ್ಲ ವರ್ಗದ ಜನರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದುವರೆಗೆ ನಡೆದ ಎಲ್ಲ ನಾಗರಿಕ ಸಮ್ಮಾನ ಕಾರ್ಯಕ್ರಮಗಳಿಗಿಂತಲೂ ವಿಭಿನ್ನವಾಗಿ ಮತ್ತು ಅರ್ಥಪೂರ್ಣವಾಗಿ ಈ ಕಾರ್ಯಕ್ರಮ ನಡೆಯಲಿದೆ.
ಅಂದು ಪೂರ್ವಾಹ್ನ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಅವರು ನಾಗರಿಕ ಸಮ್ಮಾನ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು, ಪುತ್ತೂರು ನಗರಸಭಾ ಅಧ್ಯಕ್ಷ ಜೀವಂಧರ ಜೈನ್, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಭಾಗವಹಿಸಲಿದ್ದಾರೆ. ನಿವೃತ್ತ ಪ್ರಿನ್ಸಿಪಾಲ್ ಝೇವಿಯರ್ ಡಿಸೋಜ ಅಭಿನಂದನಾ ನುಡಿಗಳನ್ನಾಡಲಿದ್ದಾರೆ ಎಂದವರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮ್ಮಾನ ಸಮಿತಿಯ ಕಾರ್ಯದರ್ಶಿ ಸೀತಾರಾಮ ಕೇವಳ, ಸದಸ್ಯರಾದ ವಸಂತ ಜಾಲಾಡಿ, ಸೀತಾರಾಮ ರೈ ಕೆದಂಬಾಡಿಗುತ್ತು, ರಮೇಶ್ ರೈ ಡಿಂಬ್ರಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?