ಕಾಪು : ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಸಭೆ

ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ 10 ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಇಂದು ದಿನಾಂಕ 21-07-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಡುಪಿ ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಪೆರ್ಡೂರು, ಬೈರಂಪಳ್ಳಿ, ಕುಕ್ಕೆಹಳ್ಳಿ, ಅಂಜಾರು ಭಾಗದಲ್ಲಿ ಡೀಮ್ಡ್ ಫಾರೆಸ್ಟ್ ಇರುವುದರಿಂದ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯವರು ಜಂಟಿ ಸರ್ವೆ ನಡೆಸಿ ಅರಣ್ಯ ಸ್ವರೂಪ ಅಲ್ಲದ ಜಾಗವನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಿ ಕೂಡಲೇ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿ ಅರಣ್ಯ ಇಲಾಖೆಯ ಮ್ಯಾಪಿಂಗ್ ಕಾರ್ಯ ಸಪ್ಟೆಂಬರ್ ಒಳಗೆ ಪೂರ್ಣಗೊಳ್ಳಲಿದ್ದು ಆ ಬಳಿಕ ಡೀಮ್ಡ್ ಫಾರೆಸ್ಟ್ ಸಂಬಂಧಿಸಿದ ಕಡತ ವಿಲೇವಾರಿಗೆ ಮಾಡುವಂತೆ ಚರ್ಚಿಸಿ ಉಡುಪಿ ತಾಲೂಕಿನ 10 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡುವ ಬಗ್ಗೆ ಖಾಲಿ ಇರುವ ಸರ್ಕಾರಿ ಜಾಗಗಳನ್ನು ಗುರುತಿಸಿ ಶೀಘ್ರವೇ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ಶಾಸಕರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರರಾದ ಗುರುರಾಜ್, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.