ಕುಕ್ಕೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.
ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ವೇಳೆ ಸಹಸ್ರಾರು ಭಕ್ತರು ಜಯಘೋಷ ಕೂಗಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣ ಕಟ್ಟೆಯಲ್ಲಿ ಅವಳಿ ಕಟ್ಟೆಯಲ್ಲಿ ಪೂಜೆ ನಡೆಯಿತು. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸಮಿತಿಯ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು, ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಯೇಸುರಾಜ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


















