ಕಡಬ, ಜೂ. 22: ಕಡಬ ತಾಲೂಕಿನ ಹನುಮಾನ್ ನಗರದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಯೋಗ ಶಿಕ್ಷಕ ಅಶೋಕ್ ರೈ ಮಾತನಾಡಿ, ಯೋಗವನ್ನು ಪ್ರತಿನಿತ್ಯ ಅಭ್ಯಾಸ ಮಾಡುವುದರಿಂದ ಮಕ್ಕಳ ಆರೋಗ್ಯ, ಏಕಾಗ್ರತೆ ಹಾಗೂ ಕಲಿಕಾ ಸಾಮರ್ಥ್ಯ ವೃದ್ಧಿಯಾಗುತ್ತದೆ. ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಯೋಗ ಮಹತ್ವದ ಪಾತ್ರ ವಹಿಸುವುದರಿಂದ ಪ್ರತಿಯೊಬ್ಬರೂ ತಮ್ಮ ದಿನಚರಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ರಾಮಣ್ಣ ಜಾಲ್ತಾರು ಮಾತನಾಡಿ, ಶಾಲೆಯ ಯೋಗಪಟುಗಳು ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ದೇಶದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಯೋಗಾಸನಗಳ ಪ್ರದರ್ಶನ ಹಾಗೂ ಸೂರ್ಯನಮಸ್ಕಾರ ನಡೆಯಿತು. ಶಾಲೆಯ ಮುಖ್ಯಗುರು ವಸಂತ ಕೆ. ಉಪಸ್ಥಿತರಿದ್ದರು.
ಭವಿಷ್ಯ ಕೆ. ಶೆಟ್ಟಿ ಸ್ವಾಗತಿಸಿದರು. ಯಶ್ವಿನ್ ರೈ ವಂದಿಸಿದರು. ಕೃತಿಕ್ ಪಿ. ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

