ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ. ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೇಲ್ಚಾವಣಿಯ ಅವಶೇಷಗಳ ಅಡಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.
ಮಂಗಳವಾರ ರಾತ್ರಿಯಿಂದ ತಡೆವಿಲ್ಲದೆ ಸುರಿದ ಭಾರಿ ಮಳೆಯಿಂದಾಗಿ ಹಳೆಯದಾಗಿದ್ದ ಮನೆಯ ಗೋಡೆಗಳು ಸಂಪೂರ್ಣವಾಗಿ ತೇವಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಪಾಲಿಕೆ ಆಯುಕ್ತರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.

