ಕಡಬ, ಜು.8: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಹಾಗೂ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಜುಲೈ 9ರಂದು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್. ಬಾಲಕೃಷ್ಣ ಕೊಯಿಲ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಮಂಗಳೂರಿನ ದಾಯ್ಜಿ ವರ್ಲ್ಡ್ ನ್ಯೂಸ್ ಮುಖ್ಯಸ್ಥ ವಾಲ್ಟರ್ ನಂದಳಿಕೆ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಮತ್ತು ಸುಬ್ರಹ್ಮಣ್ಯದ ಹಿರಿಯ ಪತ್ರಿಕಾ ವಿತರಕ ಬಸವರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಬಳಿಕ ವಾಲ್ಟರ್ ನಂದಳಿಕೆ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

