ಕಾಪು: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಸೋಮವಾರ ಪಲಿಮಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ನ 25% ನಿಧಿಯಿಂದ ಇಬ್ಬರು ಫಲಾನುಭವಿಗಳಿಗೆ ಮನೆ ರಿಪೇರಿ ಸಹಾಯಧನ, ಇಬ್ಬರು ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ ಹಾಗೂ 5% ನಿಧಿಯಿಂದ ಇಬ್ಬರು ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನದ ಚೆಕ್ಗಳನ್ನು ವಿತರಿಸಲಾಯಿತು.
ಇದೇ ವೇಳೆ, ಶಾಸಕರ ಶಿಫಾರಸ್ಸಿನ ಮೇರೆಗೆ ₹21 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಂಡ ಪಲಿಮಾರು ದೇವಸ್ಥಾನ ರಥಬೀದಿ ರಸ್ತೆಯ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅದರ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕಾಪು ತಹಶೀಲ್ದಾರ್ ಅನಂತ ಶಂಕರ್, ಪ್ರಭಾರ ಸಹಾಯಕ ನಿರ್ದೇಶಕ ಶಶಿಧರ್, ಪಲಿಮಾರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸುನಿಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


