ಕಟ್ಪಾಡಿ: ಶಾಲಾ ಶಿಕ್ಷಣ ಇಲಾಖೆ ಹಾಗೂ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ, ಕಿದಿಯೂರು ಪ್ರೌಢಶಾಲೆಯ ಸಹಯೋಗದೊಂದಿಗೆ ನಡೆದ ಉಡುಪಿ ತಾಲೂಕು ಮಟ್ಟದ ವಿದ್ಯಾರ್ಥಿನಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಟ್ಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದೆ.
ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಎಸ್‌ವಿಎಸ್ ಶಾಲೆಯ ವಿದ್ಯಾರ್ಥಿನಿ ಶ್ರೀದೇವಿ ಅವರು ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಎಸ್‌ವಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸತ್ಯೇಂದ್ರ ಪೈ ಅಭಿನಂದನೆ ಸಲ್ಲಿಸಿ, ಕ್ರೀಡೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಸೂಕ್ತ ಅವಕಾಶ ಹಾಗೂ ಪ್ರೋತ್ಸಾಹ ನೀಡಲು ಎಸ್‌ವಿಎಸ್ ಸಮೂಹ ಶಿಕ್ಷಣ ಸಂಸ್ಥೆ ಸದಾ ಸಿದ್ಧವಿದೆ ಎಂದು ಹೇಳಿದರು.
ಉಡುಪಿ ತಾಲೂಕು ಮಟ್ಟದ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಹಾಗೂ ಎಸ್‌ವಿಎಸ್ ಶಾಲೆಯ ಮುಖ್ಯ ಶಿಕ್ಷಕ ವಿವೇಕಾನಂದ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ಪಂದ್ಯಾಟದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ, ಪೋಷಕರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.


