ಪಡುಬಿದ್ರಿ: ಇಲ್ಲಿನ Aspen SEZನಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.
Aspen SEZನ ಮುಖ್ಯಸ್ಥರಾದ ಶ್ರೀಯುತ ಅಶೋಕ್ ಕುಮಾರ್ ಶೆಟ್ಟಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ತ್ಯಾಗ ಮತ್ತು ಬಲಿದಾನ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಭಕ್ತರನ್ನು ಸ್ಮರಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಾನಂತರ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಮಹತ್ತರ ಪ್ರಗತಿಯನ್ನು ವಿವರಿಸಿದರು. ವಿಜ್ಞಾನ, ತಂತ್ರಜ್ಞಾನ, ಕೈಗಾರಿಕೆ, ಶಿಕ್ಷಣ, ಮೂಲಸೌಕರ್ಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಭಾರತವು ವಿಶ್ವದ ಗಮನ ಸೆಳೆಯುವ ರೀತಿಯಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ‘ವಿಕಸಿತ ಭಾರತ – 2047’ ಸಂಕಲ್ಪದ ಕುರಿತು ಮಾತನಾಡಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ, ಸ್ವಾವಲಂಬಿ ಹಾಗೂ ವಿಶ್ವದ ಮುಂಚೂಣಿ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕತೆ, ಶಿಸ್ತು ಮತ್ತು ಬದ್ಧತೆಯಿಂದ ನಿರ್ವಹಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ E-Solution ಕಂಪನಿಯ ಗುರುಪ್ರಶಾಂತ್, ವ್ಯಾಸ ಆಚಾರ್, ಕಿರಣ್ ಕುಮಾರ್, ಕೇಶವ್ ತಂತ್ರಿ, Praj GenXನ ಯುವರಾಜ್, ಹಿಮಾಕರ್ ಪೂಜಾರಿ, Aspen SEZನ ಸೆಕ್ಯುರಿಟಿ ಹೆಡ್ ಜೀವನ್ ಶೆಟ್ಟಿ ಸೇರಿದಂತೆ ವಿವಿಧ ಕಂಪನಿಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಉಪಸ್ಥಿತರಿದ್ದರು.

