ಪಡುಕುತ್ಯಾರು: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸುವರ್ಣ ಜನ್ಮವರ್ಧಂತಿ ಮಹೋತ್ಸವದ ಅಂಗವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಆ.23ರಂದು ಪಡುಕುತ್ಯಾರಿನಲ್ಲಿ ನಡೆಯಲಿದೆ.
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಇಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು, ಜೆಒಸಿ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ರ್ಯಾಂಕ್ ಪಡೆದವರು, ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಪದವೀಧರರು, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಹಾಗೂ ಪಿಎಚ್ಡಿ ಪದವೀಧರರನ್ನು ಅಭಿನಂದಿಸಲಾಗುವುದು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು, ಅಧ್ಯಕ್ಷರು, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಪದಾಧಿಕಾರಿಗಳು, ಸಹ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಪರಮಪೂಜ್ಯ ಜಗದ್ಗುರುಗಳವರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಲಿದ್ದಾರೆ.
ಅಭಿನಂದನೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಹಾಗೂ ಸಮಸ್ತ ಶಿಷ್ಯವೃಂದದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಮನವಿ ಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


