ಹೊಸಂಗಡಿ: ಹೊಸಂಗಡಿಯಲ್ಲಿ ನಡೆದ ಅಂಪಾರು ಕ್ಲಸ್ಟರ್ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಅಂಡರ್-14 ಬಾಲಕರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ತಾಲ್ಲೂಕು ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ. ಇದೇ ವೇಳೆ, ಅಂಡರ್-14 ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಅಂಡರ್-17 ಬಾಲಕಿಯರ ತಂಡವೂ ದ್ವಿತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಶ್ವೇತಾ ಗಣೇಶ್ ಅವರು ಅಭಿನಂದನೆ ಸಲ್ಲಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕರುಣಾಕರ ಶೆಟ್ಟಿ, ಅಶ್ವಿನಿ ಶೆಟ್ಟಿ ಹಾಗೂ ಸದಾಶಿವ ಜೆ. ಅವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ನೀಡಿದ್ದರು.
ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಮತ್ತು ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದು, ತಾಲ್ಲೂಕು ಮಟ್ಟದ ಪಂದ್ಯಾವಳಿಗೆ ಆಯ್ಕೆಯಾದ ಅಂಡರ್-14 ಬಾಲಕರ ತಂಡಕ್ಕೆ ಶುಭ ಹಾರೈಸಿದ್ದಾರೆ.


