ಶಿರ್ವ: ಮೂಲ್ಕಿ ಸುಂದರ ರಾಮ ಶೆಟ್ಟಿ ಕಾಲೇಜು, ಶಿವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಮಿಥುನ್ ಚಕ್ರವರ್ತಿ ಅವರು ರಾಷ್ಟ್ರೀಯ ಸೇವಾ ಯೋಜನೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ 1969ರಲ್ಲಿ ಆರಂಭಗೊಂಡ ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಸಮಾಜ ಸೇವೆ, ಶಿಸ್ತು, ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪ ಮಾಡಿದರು.
NSS ಕಾರ್ಯಕ್ರಮಾಧಿಕಾರಿ ಡಾ. ಸೋನಾ ಎಚ್.ಸಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಾದ ಮನೀಶ್ ಹಾಗೂ ಕು. ಧನುಶ್ರೀ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ದಿನಾಚರಣೆಯ ಅಂಗವಾಗಿ ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಇದರೊಂದಿಗೆ ಕಾಲೇಜು ಆವರಣದಲ್ಲಿ ಸ್ವಚ್ಛತಾ ಕಾರ್ಯಾಚರಣೆಯನ್ನೂ ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿಗಳು ಹಾಗೂ NSS ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.


