ಕುಂದಾಪುರ: ಬಡಾಕೆರೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯ ನಾವುಂದ ಸಮೀಪ ಎರಡು ಶಿಫ್ಟ್ ಕಾರುಗಳು ಹಾಗೂ ಮಾರುತಿ ಸೂಪರ್ ಕ್ಯಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಅರೆಹೊಳೆ ಬೈಪಾಸ್ ಕಡೆಯಿಂದ ಕುಂದಾಪುರದತ್ತ ಬರುತ್ತಿದ್ದ ಶಿಫ್ಟ್ ಕಾರು ಹಾಗೂ ಕುಂದಾಪುರದಿಂದ ಶಿರೂರು ಕಡೆಗೆ ತೆರಳುತ್ತಿದ್ದ ಮತ್ತೊಂದು ಶಿಫ್ಟ್ ಕಾರು ಸೇರಿದಂತೆ ಮಾರುತಿ ಸೂಪರ್ ಕ್ಯಾರಿ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರದೇಶದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ಪ್ರತಿ ಸಲವೂ ಹಲವಾರು ಅಪಘಾತ ಪ್ರಕರಣಗಳು ವರದಿಯಾಗುತ್ತಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಡಾಕೆರೆ ಕಡೆಯಿಂದ ಬರುವ ವಾಹನಗಳು ನೇರವಾಗಿ ರಾಷ್ಟ್ರೀಯ ಹೆದ್ದಾರಿಗೆ ಬಂದು ನಿಲ್ಲುವ ಪರಿಸ್ಥಿತಿ ಇರುವುದರಿಂದ, ಇಲ್ಲಿ ಸೂಕ್ತ ಸರ್ವಿಸ್ ರಸ್ತೆ, ತಿರುವು ಹಾಗೂ ಸಂಚಾರ ನಿಯಂತ್ರಣ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಹಿಂದೆಯೂ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪಘಾತಗಳು ಮರುಕಳಿಸದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅಗತ್ಯವಿರುವ ರಸ್ತೆ ಸುರಕ್ಷತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಬಡಾಕೆರೆ ಕ್ರಾಸ್‌ನಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ, ವಾಹನಗಳ ಸಂಚಾರದ ಮೇಲೆ ನಿಗಾ ವಹಿಸುವುದು ಅತ್ಯಗತ್ಯ. ಅಪಘಾತಗಳ ಮರುಕಳಿಕೆಯನ್ನು ತಡೆಯಲು ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


