ಮೂಡುಬೆಳ್ಳೆ: ನೆಲ್ಲಿಕಟ್ಟೆಯ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ 2026-27ನೇ ಸಾಲಿನ ವಾರ್ಷಿಕ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭವು ಕಾಲೇಜಿನ ಜ್ಞಾನಮಂಟಪದಲ್ಲಿ ನಡೆಯಿತು.
ಭಾರತೀಯ ರೈಲ್ವೆ ಉದ್ಯೋಗಿ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಅಭಿನ ದೇವಾಡಿಗ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಶಿಸ್ತಿನ ಜೀವನವನ್ನು ರೂಢಿಸಿಕೊಳ್ಳಬೇಕು. ಪಾಠದ ಜೊತೆಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಮ್ಮ ಕೌಶಲ್ಯ ಮತ್ತು ಪ್ರತಿಭೆಯನ್ನು ಬೆಳೆಸಿಕೊಂಡಾಗ ಮಾತ್ರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷರಾದ ಯಾದವ ದೇವಾಡಿಗ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ನಿರಂಜನ್ ಬೆಳ್ಳೆ ಅವರು ಶಾಂತಿಯ ಸಂಕೇತವಾದ ಜೋಡಿ ಪಾರಿವಾಳಗಳನ್ನು ಆಕಾಶಕ್ಕೆ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ತರಬೇತುದಾರ ವಸಂತ್ ಜೋಗಿ ಉಡುಪಿ ಅವರು ಕ್ರೀಡೋತ್ಸವದ ಧ್ವಜಾರೋಹಣ ನೆರವೇರಿಸಿದರು. ಕಾಲೇಜಿನ ನಾಲ್ಕು ತಂಡಗಳಿಂದ ಪಥಸಂಚಲನ ನಡೆಯಿತು. ಕುಮಾರಿ ರಮ್ಯಾ ಆರ್. ಮೊಗವೀರ ಅವರು ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.
ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ. ಗೋಪಿಕೃಷ್ಣ ರಾವ್ ಶುಭ ಹಾರೈಸಿದರು. ಜಿ.ಐ.ಎಲ್.ಕೆ-ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ., ಉಡುಪಿಯ ಪ್ರಭಾರ ಕಾರ್ಯದರ್ಶಿ ಪ್ರಭಾಕರ್ ಕೆ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀನಾ ಎಸ್. ನಾಯಕ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ರಚನಾ ವಂದಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ವಿಭಾಗದವರು ಕಾರ್ಯಕ್ರಮ ನಿರೂಪಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಹಿರಿಯ ರೋಟೇರಿಯನ್ ಜಾನ್ ಸಿಕ್ವೇರಾ, ಮಣಿಪುರ ಹಾಗೂ ಸ್ಥಳೀಯರಾದ ಮೋಹಿನಿ ಪೈ ಅವರು ಅತಿಥಿಗಳಾಗಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.
ಮೂಡುಬೆಳ್ಳೆ ನೆಲ್ಲಿಕಟ್ಟೆಯ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ
RELATED ARTICLES

