ಕೋಟಾ: ಖಾತು ಶ್ಯಾಮ್ ಜಿ ದೇವಸ್ಥಾನದ ದರ್ಶನ ಮುಗಿಸಿ ಮಹಾರಾಷ್ಟ್ರಕ್ಕೆ ಮರಳುತ್ತಿದ್ದ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವು ನಿಲ್ಲಿಸಿದ್ದ ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಕೋಟಾ ಜಿಲ್ಲೆಯ ಕೋಟಾ–ಉದಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಂಭುಪುರ ಗ್ರಾಮದ ಬಳಿ ರವಿವಾರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಕುಟುಂಬದ 16 ಮಂದಿ ಪ್ರಯಾಣಿಸುತ್ತಿದ್ದ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಕ್ಕಳು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜೇಶ್ ಜೋಶಿ ತಿಳಿಸಿದ್ದಾರೆ.ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬದುಕುಳಿದವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವುದು ಆಡಳಿತದ ಆದ್ಯತೆಯಾಗಿದೆ ಎಂದು ಜೋಶಿ ಹೇಳಿದ್ದಾರೆ.ಮೃತರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳು ನಿರೀಕ್ಷಿಸಲಾಗುತ್ತಿದೆ.

