ಮಂಗಳೂರು: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಜಿಮ್ಮಿ ಅಲಿಯಾಸ್ ಜಿಂಕೆ ಜಿಮ್ಮಿ ಅಲಿಯಾಸ್ ಪೈಜಲ್ ಅಲಿಯಾಸ್ ಮಹಮ್ಮದ್ ಪೈಜಲ್ ಎಂದು ಗುರುತಿಸಲಾಗಿದೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 235/2016ರ ಕಳ್ಳತನ ಮತ್ತು ಮನೆಗೆ ಅಕ್ರಮ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ. ಈ ಪ್ರಕರಣವು ನ್ಯಾಯಾಲಯದಲ್ಲಿ ಸಿ.ಸಿ. ಸಂಖ್ಯೆ 191/2021ರ ಅಡಿಯಲ್ಲಿ ವಿಚಾರಣೆಯಲ್ಲಿತ್ತು.
ಆದರೆ ಆರೋಪಿಯು ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ 2026ರಲ್ಲಿ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿಸಿ (ಲಾಂಗ್ ಪೆಂಡಿಂಗ್ ಕೇಸ್) ಎಂದು ಪರಿಗಣಿಸಿತ್ತು.
ನವೆಂಬರ್ 24ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಆರೋಪಿಯನ್ನು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಇನ್ನು ಬಂಧಿತ ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.
ಐದು ವರ್ಷಗಳಿಂದ ಪೊಲೀಸರಿಗೆ ಹಾಗೂ ನ್ಯಾಯಾಲಯಕ್ಕೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಪತ್ತೆಹಚ್ಚುವಲ್ಲಿ ಮಂಗಳೂರು ಉತ್ತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

