ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಏಳನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ಹಾಗೂ ಕ್ರೀಡಾಪಟು ವಿಹಾನ್ ಅವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಗಮನಾರ್ಹ ಸಾಧನೆಗೈದು ಶಾಲೆಗೆ ಕೀರ್ತಿ ತಂದಿದ್ದಾರೆ.
14 ವರ್ಷ ವಯೋಮಿತಿಯ ಬಾಲಕರ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಹಾಗೂ 4 × 100 ಮೀಟರ್ ರಿಲೇ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ತಮ್ಮ ಅಸಾಧಾರಣ ವೇಗ, ಕಠಿಣ ಪರಿಶ್ರಮ, ಶಿಸ್ತು ಮತ್ತು ದೃಢಸಂಕಲ್ಪದ ಮೂಲಕ ಈ ಸಾಧನೆಗೈದಿರುವ ವಿಹಾನ್ ಅವರ ಕ್ರೀಡಾ ಪ್ರತಿಭೆ ಮೆಚ್ಚುಗೆಗೆ ಪಾತ್ರವಾಗಿದೆ.
ವಿಹಾನ್ ಅವರ ಈ ಅಮೋಘ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ವಂ. ಫಾ. ರೋಹನ್ ಡಿ’ಅಲ್ಮೇಡಾ,ಎಸ್.ಜೆ. ಅವರು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಉಪಪ್ರಾಂಶುಪಾಲರು ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಕ್ರೀಡಾ ಪಯಣ ಯಶಸ್ವಿಯಾಗಲಿ ಹಾಗೂ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದರು.

