ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ನಿಧನ
ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ (Lohitashwa) ನಿಧನರಾಗಿದ್ದಾರೆ. ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಇಂದು (ನವೆಂಬರ್ 8) ಅವರು ಕೊನೆಯುಸಿರು ಎಳೆದಿದ್ದಾರೆ.
ಲೋಹಿತಾಶ್ವ ಅವರಿಗೆ 80 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅವರಿಗೆ ಇನ್ಫೆಕ್ಷನ್ ಆಗಿತ್ತು. ಹಾಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನೇನು ಗುಣಮುಖರಾಗುತ್ತಾರೆ ಎಂದುಕೊಳ್ಳುತ್ತಿರುವಾಗಲೇ ಅವರಿಗೆ ಹೃದಯಾಘಾತ ಸಂಭವಿಸಿತು. ನಂತರ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಸುಮಾರು ಒಂದು ತಿಂಗಳ ಕಾಲ ಅವರಿಗೆ ಚಿಕಿತ್ಸೆ ನೀಡಲಾಯಿತು. ಆದರೆ ಇಂದು ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರು ಎಳೆದಿದ್ದಾರೆ.
ರಾತ್ರಿ 7.30ರ ನಂತರ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಕ್ಕೆ ಅವರ ಪಾರ್ಥೀವ ಶರೀರ ತೆಗೆದುಕೊಂಡು ಹೋಗಲಾಗುತ್ತದೆ. ರಾತ್ರಿ 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಇರುತ್ತದೆ. ನಾಳೆ (ನವೆಂಬರ್ 9) ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.


















