ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕಾಂಗ್ರೆಸ್‍ನ್ನು ಅಧಿಕಾರಕ್ಕೆ ತನ್ನಿ
ಮೂಡುಬಿದರೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿಕೆ

ಮೂಡುಬಿದಿರೆ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅಭಿವೃದ್ಧಿಯ ನೆಪದಲ್ಲಿ ಪರ್ಸಂಟೇಜ್ ವ್ಯವಹಾರ ನಡೆಯುತ್ತಿದೆ.ಇದನ್ನೆಲ್ಲಾ ಹೋಗಲಾಡಿಸಿ ಭ್ರಷ್ಟಚಾರ ಮುಕ್ತ ಮೂಡುಬಿದಿರೆಯನ್ನಾಗಿ ರೂಪುಗೊಳಿಸಲು ಕಾಂಗ್ರೆಸ್ ನ ಎಂಎಲ್ ಎ ಬರಬೇಕು ಎಂದು ಮಾಜಿ ಸಚಿವ, ಕೆಪಿಸಿಸಿಯ ರಾಜ್ಯ ಉಪಾಧ್ಯಕ್ಷ ಕೆ.ಅಭಯಚಂದ್ರ ಜೈನ್ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಬಲಾಢ್ಯ ನಾಯಕರುಗಳು ಜನವರಿ 22 ರಂದು ಮಂಗಳೂರಿಗೆ ಆಗಮಿಸಲಿದ್ದು ಈ ನಿಟ್ಟಿನಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ಶುಕ್ರವಾರ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.ಮೂಡುಬಿದಿರೆಯ ಶಾಸಕರು ರಸ್ತೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದಕ್ಕಿಂತ ಸರ್ಕಾರಿ ಕಛೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಿಯಂತ್ರಿಸಲಿ ಎಂದ ಅವರು ತಾನು ಬಡ ಕುಟುಂಬದಿಂದ ಬಂದವ ಎಂದು ಹೇಳುತ್ತಲೇ ಇಂಜಿನಿಯರ್ ಗಳ ಮೂಲಕ ಪರ್ಸಂಟೇಜ್ ವ್ಯವಹಾರವನ್ನು ನಡೆಸುತ್ತಿದ್ದಾರೆಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ ಕಾಂಗ್ರೆಸ್ ನಾಯಕರು ಒಗಟ್ಟು ಪ್ರದರ್ಶಿಸಬೇಕೆಂಬ ಆಶಯ ಕಾಂಗ್ರೆಸ್ ಕಾರ್ಯಕರ್ತರಲ್ಲಿದೆ. ಪ್ರಜಾ ಧ್ವನಿ ಕಾರ್ಯಕ್ರಮದ ಮೂಲಕ ರಾಜ್ಯ ನಾಯಕರು ರಾಜ್ಯ ಪ್ರವಾಸ ನಡೆಸುತ್ತಿದ್ದು, ಕಾರ್ಯಕರ್ತರಿಗೆ ಧೈರ್ಯ, ಹುಮ್ಮಸ್ಸು ತುಂಬುತ್ತಿದ್ದಾರೆ. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಾರ್ಯಕರ್ತರು ಈಗಿಂದಲೇ ಕಾರ್ಯೋನ್ಮುಖರಾಗಬೇಕು ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಬಗ್ಗೆ ಮಾಹಿತಿ ನೀಡಿದರು.
ಮಂಗಳೂರು ಮ.ನ.ಪಾ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಸುಪ್ರಿಯಾ.ಡಿ ಶೆಟ್ಟಿ.ಪುರಸಭಾ ಸದಸ್ಯರಾದ ಪುರಂದರ ದೇವಾಡಿಗ, ಪಿ.ಕೆ ಥೋಮಸ್, ಎಪಿಎಂಸಿ ಸದಸ್ಯ ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.